Posted on 07-07-2025 |
Share: Facebook | X | Whatsapp | Instagram
ನಾಳೆಯಿಂದ ಮಹಾನಗರ ಪಾಲಿಕೆ ನೌಕರರ ಅನಿರ್ಧಿಷ್ಟ ಮುಷ್ಕರ
ಸ್ವಚ್ಛತೆ ಸೇರಿದಂತೆ ಎಲ್ಲಾ ಕೆಲಸಗಳು ಸ್ಥಗಿತ
ಶಿವಮೊಗ್ಗ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಹಾನಗರ ಪಾಲಿಕೆ ನೌಕರರು ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ‍್ಮಾನಿಸಿದ್ದಾರೆ.
ಮಹಾನಗರ ಪಾಲಿಕೆಗಳ ನೌಕರರ ಸಂಘದ ರಾಜ್ಯ ಸಮಿತಿ ಕರೆ ಮೇರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘವು ನಾಳೆಯಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಸ್ವಚ್ಛತಾ ಕಾರ್ಮಿಕರೂ ಸೇರಿದಂತೆ ಪಾಲಿಕೆಯ ಎಲ್ಲಾ ವಿಭಾಗಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದಾಗಿ ನಗರದ ಸ್ವಚ್ಚತೆ, ಕಂದಾಯ ವಿಭಾಗಗಳ ಕಾರ್ಯಗಳು ಸ್ಥಗಿತಗೊಳ್ಳಲಿವೆ.
ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಏಳನೆ ವೇತನ ಆಯೋಗದ ಸೌಲಭ್ಯಗಳನ್ನು ಪಾಲಿಕೆ ನೌಕರರಿಗೂ ವಿಸ್ತರಿಸಿ, ಅನುದಾನ ಬಿಡುಗಡೆ, ವೃಂದ ಮತ್ತು ನೇಮಕಾತಿ ನಿಯಾಮವಳಿಗಳನ್ನು ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸುವುದು, ಪಾಲಿಕೆ ನೌಕರರಿಗೂ ಕೆಜಿಐಡಿ, ಜಿಪಿಎಫ್ ಸೌಲಭ್ಯ ವಿಸ್ತರಣೆ ಮಾಡುವುದು , ಆರೋಗ್ಯ ಸೌಲಭ್ಯದ ಜ್ಯೋತಿ/ ಆರೋಗ್ಯ ಸಂಜೀವಿನಿ ಜಾರಿ, ಪಾಲಿಕೆ ಅಧಿಕಾರಿ/ನೌಕರರಿಗೂ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ, ವಿವಿಧ ವೃಂದಗಳ ಹುದ್ದೆಗಳಿಗೆ ಮುಂಬಡ್ತಿ ನೀಡಬೇಕೆಂದು ಆಗ್ರಹಿಸಿರುವ ಮಹಾನಗರ ಪಾಲಿಕೆ ನೌಕರರ ಸಂಘವು ನಾಳೆಯಿಂದ ಅನಿರ್ಧಿಷ್ಟಕಾಲದವರೆಗೆ ಮುಷ್ಕರ ಹಮ್ಮಿಕೊಂಡಿದೆ.
\"ಪಾಲಿಕೆ ನೌಕರರ ಅನೇಕ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆಯುತ್ತಾ ಬಂದಿದೆ. ಅನೇಕ ಬಾರಿ ಮನವಿಗಳನ್ನು ನೀಡಿದ್ದರೂ ನಗರಾಭಿವೃದ್ದಿ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಬೇಡಿಕೆಗಳ ಈಡೇರಿಕೆಗೆ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವುದು ಅನಿವಾರ‍್ಯವಾಗಿದೆ.
ನಾಳೆ ಬೆಳಗ್ಗೆ ಇಲ್ಲಿನ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಪಾಲಿಕೆಯ ಎಲ್ಲಾ ವಿಭಾಗಗಳ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಎನ್ ಗೋವಿಂದ ಮತ್ತು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ